ಸಂಜೀವ್ ಖನ್ನಾ ಅವರು ಸುಪ್ರೀಂಕೋರ್ಟ್ನ 51ನೇ ಮುಖ್ಯ ನ್ಯಾಯಮೂರ್ತಿ ನೇಮಕವಾಗಿದ್ದಾರೆ.ನಿರ್ಗಮಿತ ಮುಖ್ಯ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ( DY Chandrachud ) ಅವರು ತಮ್ಮ ಉತ್ತರಾಧಿಕಾರಿಯಾಗಿ ಸಂಜೀವ್ ಖನ್ನಾ ಹೆಸರನ್ನು ಸೂಚಿಸಿದ ಬಳಿಕ ರಾಷ್ಟ್ರಪತಿಗಳು ನಿನ್ನೆ (ಅ.24) ಅಧಿಕೃತವಾಗಿ ಸಂಜೀವ್ ಖನ್ನಾ ಅವರನ್ನು ನೇಮಕ ಮಾಡಿದ್ದಾರೆ. ಈ ವಿಚಾರವನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ನಿನ್ನೆ ಸಂಜೆ ಎಕ್ಸ್ ಖಾತೆಯ ಮೂಲಕ ತಿಳಿಸಿದ್ದಾರೆ.
ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು, ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚಿಸಿದ ನಂತರ, ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜಸ್ಟೀಸ್ ಸಂಜೀವ್ ಖನ್ನಾ ಅವರನ್ನು ನವೆಂಬರ್ 11 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಸಂತೋಷವಾಗಿದೆ ಎಂದು ಅರ್ಜುನ್ ರಾಮ್ ಮೇಘವಾಲ್ ಅವರು ಹೇಳಿದ್ದಾರೆ.
ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ನವೆಂಬರ್ 8 ರಂದು ನಿವೃತ್ತಿ ಹೊಂದಲಿದ್ದಾರೆ. ಈ ಹಿನ್ನೆಲೆಯಲ್ಲಿ, ಆ ಸ್ಥಾನಕ್ಕೆ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿದ್ದರು. ತಮ್ಮ ಉತ್ತರಾಧಿಕಾರಿಯನ್ನು ಶಿಫಾರಸು ಮಾಡುವಂತೆ ಕಾನೂನು ಸಚಿವಾಲಯ ಕೋರಿದ ಹಿನ್ನೆಲೆಯಲ್ಲಿ ಚಂದ್ರಚೂಡ್ ಅವರು ಸಂಜೀವ್ ಖನ್ನಾ ಹೆಸರು ಶಿಫಾರಸು ಮಾಡಿದ್ದರು.ಅಂದಹಾಗೆ ಸಂಜೀವ್ ಖನ್ನಾ ಅವರು 2025, ಮೇ 13ರಂದು ನಿವೃತ್ತಿಯಾಗಲಿದ್ದು, ಅದಕ್ಕೂ ಮುನ್ನ ಆರು ತಿಂಗಳುಗಳ ಕಾಲ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಲಿದ್ದಾರೆ.